ಒಳಗೇನಿದೆ!?

ಕರಾವಳಿಯಲ್ಲಿ ಉತ್ತಮ ಪಂಚತಾರಾ ಹೋಟೆಲ್‌ಗಳಾಗಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರಾವಳಿಯ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಪಂಚತಾರಾ ಹೋಟೆಲ್‌ಗಳು ನಿರ್ಮಾಣವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.

ಕರ್ನಾಟಕ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ, ಇಲ್ಲಿ 320 ಕಿ.ಮೀ. ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.

ಅನೇಕ ರಾಜ್ಯಗಳಿಗೆ  ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮಕ್ಕೆ ಪೂರಕ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು.

ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಗೆ ನಾವು ಪ್ರತ್ಯೇಕ ನೀತಿ ತರುತ್ತೇವೆ, ನೀವು ಮಾಸ್ಟರ್ ಪ್ಲ್ಯಾನ್‌ ಸಿದ್ದಪಡಿಸಿಕೊಂಡು ಬನ್ನಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ ಆಗುವ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೆ ವೇಗವೂ ಸಿಗುತ್ತದೆ. ಹೀಗಾಗಿ ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು.

ಕರಾವಳಿಯಲ್ಲಿ ಮೆಡಿಕಲ್‌ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್‌ ಇಲ್ಲ. ಸಂಜೆ ಆಗುತ್ತಿದ್ದಂತೆ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿಗೆ ವಿದೇಶಿ ಪ್ರವಾಸಿಗರು ಬಂದಾಗ ಉಳಿದುಕೊಳ್ಳಲು ಅಂಥ ಗುಣಮಟ್ಟದ ಹೋಟೆಲ್‌ಗಳ ಅಗತ್ಯವಿದೆ ಎಂದು ಸಿಎಂ ಹೇಳಿದರು.

ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ.  ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್‌ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು.

ಇದಕ್ಕೆ ಧ್ವನಿಗೂಡಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತಿ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ಧಕ್ಕೂ  ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು.

ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತಿ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಪ್ರಸ್ತಾವನೆ ಮುಂದಿಟ್ಟರು.

ಇದೂ ಓದಿ: ಹೋಟೆಲ್‌ ಕನ್ನಡ: ಇದು ಕನ್ನಡಿಗ, ಕರ್ನಾಟಕದ ಹೋಟೆಲಿಗರ ಸುದ್ದಿದರ್ಶಿನಿ

ಇದೂ ಓದಿ:ಅರಮನೆ ಮೈದಾನದಲ್ಲೇ ಕುಂದಾಪ್ರ ಕನ್ನಡ ಹಬ್ಬ; ಆಯೋಜನೆ ಸಾಧ್ಯವಾಗಿದ್ದು ಹೇಗೆ?

ಇದೂ ಓದಿ: ಹೋಟೆಲಿಗರ ಪ್ರಮುಖ ಬೇಡಿಕೆ ಸಂಬಂಧ ವಿತ್ತ ಸಚಿವರ ಪ್ರತಿಕ್ರಿಯೆ ಇದು…

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ